Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಜಲ ಜೀವನ್ ಮಿಷನ್‌ ಯಶಸ್ಸಿಗೆ ಸವಿತಾ ಕರಾಯ ಅವರಿಗೆ ರಾಷ್ಟ್ರಪ್ರಶಸ್ತಿ,ಮಹಿಳಾ ಸಾಧಕಿಯರಿಗೆ ದೆಹಲಿಯಲ್ಲಿ ಜಲ ಮಹೋತ್ಸವ ಸನ್ಮಾನ

ಮಂಗಳೂರು : ನವದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರಪತಿಗಳ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಷ್ಠಿತ ‘ಜಲ ಮಹೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಶಸ್ತಿ ಸ್ವೀಕರಿಸುವ ಮೂಲಕ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಹಿಳಾ ಸಾಧಕಿಯರು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಜಲಶಕ್ತಿ ಸಚಿವಾಲಯವು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಈ ವಿಶೇಷ ಕಾರ್ಯಕ್ರಮದಲ್ಲಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಮಹಿಳೆಯರನ್ನು ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾನ ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಶಾಂಭವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮ ಪಂಚಾಯತ್‌ನ ಸವಿತಾ ಈ ಮಹತ್ವದ ವೇದಿಕೆಯಲ್ಲಿ ಪುರಸ್ಕೃತರಾಗಿದ್ದಾರೆ.

ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ ಗ್ರಾಮದ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯೆಯಾದ ಸವಿತಾ ಅವರು  ಮಾ.11ರಂದು  ದೆಹಲಿಯ ವಿಜ್ಞಾನ ಭವನದಲ್ಲಿ ಜಲ ಶಕ್ತಿ ಸಚಿವಾಲಯದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವಕ್ಕೆ ಪಾತ್ರರಾಗಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಇವರು ದೆಹಲಿಗೆ ತೆರಳಿದ್ದು, ನೀರಿನ ಶುಲ್ಕ ಸಂಗ್ರಹ ವಿಭಾಗದಲ್ಲಿ ರಾಷ್ಟ್ರ ಮಟ್ಟದ ಗಮನ ಸೆಳೆದಿದ್ದಾರೆ.

ಜಲಜೀವನ್ ಮಿಷನ್ ಯೋಜನೆಯ ಯಶಸ್ವಿ ಅನುಷ್ಠಾನ, 24 ಗಂಟೆ ಕುಡಿಯುವ ನೀರಿನ ಪದ್ಧತಿಯ ಸಮರ್ಪಕ ನಿರ್ವಹಣೆ ಮತ್ತು ನಲ್ ಜಲ್ ಮಿತ್ರ ಸಮಿತಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಇವರ ಸಾಧನೆಯನ್ನು ಕೇಂದ್ರ ಸರ್ಕಾರ ಗುರುತಿಸಿದೆ. ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಸವಿತಾ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಎಲ್ಲಾ ತಾಲೂಕು ಪಂಚಾಯಿತಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪ ವಿಭಾಗಗಳು ಮತ್ತು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ವತಿಯಿಂದ  ಶುಭಕೋರಿದ್ದಾರೆ.