ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ ದ.ಕ. ಜಿಲ್ಲಾಧ್ಯಕ್ಷರಾಗಿ ಶಿವಾನಂದ ಆರ್. ಕೆ ಆಯ್ಕೆ
ಮುಲ್ಕಿ: “ಸಂಕಲ್ಪ ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಘ (ರಿ)” ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ಶಿವಾನಂದ ಆರ್. ಕೆ ಅವರನ್ನು ಆಯ್ಕೆ ಮಾಡಲಾಗಿದೆ.
ಮೂಲತಃ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶಿವಾನಂದ ಆರ್. ಕೆ ಅವರು ಕಾರ್ಮಿಕರ ಸಮಸ್ಯೆಗಳ ಪರಿಹಾರ, ಸಂಘಟನೆಯ ಬಲವರ್ಧನೆ ಹಾಗೂ ಕಾರ್ಮಿಕರ ಹಕ್ಕುಗಳಿಗಾಗಿ ಶ್ರಮಿಸುತ್ತಿರುವ ವ್ಯಕ್ತಿಯಾಗಿದ್ದಾರೆ. ಇವರ ಸಾಮಾಜಿಕ ಸೇವೆ ಹಾಗೂ ಸಂಘಟನಾ ಸಾಮರ್ಥ್ಯವನ್ನು ಗುರುತಿಸಿ ಸಂಘದ ರಾಜ್ಯಾಧ್ಯಕ್ಷರಾದ ಪರಶುರಾಮ ಬಾಗಲವಾಡ ಅವರು ನೇಮಕಾತಿ ಆದೇಶ ಪತ್ರವನ್ನು ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪರಶುರಾಮ ಬಾಗಲವಾಡ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಸಂಘಟನೆ ಕಾರ್ಯನಿರ್ವಹಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಶಿವಾನಂದ ಆರ್. ಕೆ ಅವರಿಗೆ ನೀಡಲಾಗಿದೆ ಎಂದರು
ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶಿವಾನಂದ ಆರ್. ಕೆ ಅವರು ಮಾತನಾಡಿ, ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹಾಗೂ ಸಂಘಟನೆಯನ್ನು ಗ್ರಾಮ ಮಟ್ಟದವರೆಗೆ ವಿಸ್ತರಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಸಂಘದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಮಿಕರು ಶಿವಾನಂದ ಆರ್. ಕೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ