Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕಟೀಲು ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್: ಉದ್ಯೋಗಮುಖಿ ಭವಿಷ್ಯಕ್ಕೆ ಭದ್ರ ಅಡಿಪಾಯ

ಕಟೀಲು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರಥಮ ದರ್ಜೆ  ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಷನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಪ್ರಾಂಶುಪಾಲರಾದ ಡಾ. ವಿಜಯ ವಿ. ಅವರು ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಕಾಲೇಜಿನ ಶೈಕ್ಷಣಿಕ ಪರಂಪರೆ, ಶಿಸ್ತು, ಮೌಲ್ಯಾಧಾರಿತ ಶಿಕ್ಷಣ, ವಿದ್ಯಾರ್ಥಿ ಕಲ್ಯಾಣ ಕಾರ್ಯಕ್ರಮಗಳು ಹಾಗೂ ವಿವಿಧ ಮೂಲಸೌಕರ್ಯಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿದ್ದರೂ ಸಹ ವಿದ್ಯಾರ್ಥಿಗಳನ್ನು ಕೈಗಾರಿಕೆಗಳ ಅಗತ್ಯಗಳಿಗೆ ಅನುಗುಣವಾಗಿ ರೂಪಿಸುವ ದೃಢ ಸಂಕಲ್ಪದೊಂದಿಗೆ ಕಾಲೇಜು ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು. ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸಿದ ತಕ್ಷಣವೇ ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕಾಲೇಜಿನಲ್ಲಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ಪ್ರಯೋಗಾಲಯವನ್ನು ಅಭಿವೃದ್ಧಿಪಡಿಸಲಾಗಿದ್ದು, ಸುಸಜ್ಜಿತ ಹಾಗೂ ಹವಾನಿಯಂತ್ರಿತ ಕಂಪ್ಯೂಟರ್ ಪ್ರಯೋಗಾಲಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.
ಪ್ರತಿ ಬಿ.ಕಾಂ. ವಿದ್ಯಾರ್ಥಿಗೆ ಉಚಿತವಾಗಿ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವ ಉದ್ದೇಶದಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ “ಸೈಬರ್ ಸೆಕ್ಯುರಿಟಿ”, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ “ಆರ್ಟಿಫಿಷಿಯಲ್ ಇಂಟೆಲಿಜೆನ್ಸ್” ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ “ಬಿಸಿನೆಸ್ ಡೇಟಾ ಅನಾಲಿಟಿಕ್ಸ್” ವಿಷಯಗಳಲ್ಲಿ ವಿಶೇಷ ಪ್ರಮಾಣಪತ್ರ ಕೋರ್ಸ್‌ಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು. ಇದರ ಜೊತೆಗೆ ಅಡ್ವಾನ್ಸ್ಡ್ ಎಕ್ಸೆಲ್, ಟ್ಯಾಲಿ ಪ್ರೈಮ್, ಜಾವಾಸ್ಕ್ರಿಪ್ಟ್ ಸೇರಿದಂತೆ ವಿವಿಧ ಕೈಗಾರಿಕಾ ಬಳಕೆಯ ತಂತ್ರಜ್ಞಾನಗಳಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು. ಇದೇ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳನ್ನು ಇಂದಿನ ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ತೆರಿಗೆ ನಿರ್ವಹಣಾ ಸಾಫ್ಟ್‌ವೇರ್‌, ಲೆಕ್ಕಪತ್ರ ನಿರ್ವಹಣಾ ಸಾಫ್ಟ್‌ವೇರ್‌ ಹಾಗೂ ಕೃತಕ ಬುದ್ಧಿಮತ್ತೆ ಆಧಾರಿತ ವಿವಿಧ ತಂತ್ರಜ್ಞಾನಗಳ ಪ್ರಾಯೋಗಿಕ ತರಬೇತಿಯನ್ನು ಕಾಲೇಜಿನಲ್ಲಿ ಉಚಿತವಾಗಿ ಆರಂಭಿಸಲಾಗುವುದು ಎಂದು ಹೇಳಿದರು.”
ಈ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಸಿಯೋನಾ ಸೊಲ್ಯೂಷನ್ಸ್, ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ), ಮಂಗಳೂರು ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿರುವ ಚಾರ್ಟರ್ಡ್ ಅಕೌಂಟೆಂಟ್‌ಗಳ ಸಹಯೋಗದೊಂದಿಗೆ ಅನುಭವಿ ತಜ್ಞರಿಂದ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಉದ್ಯೋಗಾರ್ಹತೆ, ಆತ್ಮವಿಶ್ವಾಸ ಹಾಗೂ ವೃತ್ತಿಪರ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶವನ್ನು ಹೊಂದಿವೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆಗೆ ಸಂವಹನ ಕೌಶಲ್ಯ, ಸಂದರ್ಶನ ಕೌಶಲ್ಯ, ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣಗಳು ಹಾಗೂ ಡಿಜಿಟಲ್ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದ ಅವರು, ನಿಯಮಿತ ಹಾಜರಾತಿ, ಶಿಸ್ತು, ಸಮಯಪಾಲನೆ ಮತ್ತು ನಿರಂತರ ಅಭ್ಯಾಸವೇ ಯಶಸ್ಸಿನ ಮೂಲಮಂತ್ರಗಳಾಗಿವೆ ಎಂದು ಹೇಳಿದರು.
ಕಂಪ್ಯೂಟರ್ ತರಬೇತುದಾರರಾದ ಶ್ರೀಮತಿ ಹರ್ಷಿತಾ ಶೆಟ್ಟಿ, ವಿದ್ಯಾರ್ಥಿ ನಾಯಕ ಯಜ್ಞೇಶ್ ಶೆಟ್ಟಿ ಸಂಯೋಜಿಸಿದರು.