ಬಜಪೆ ಏರ್ಪೋರ್ಟ್–ಕೈಕಂಬ ರಸ್ತೆ ದುರಸ್ಥಿ ಕಾಮಗಾರಿ ಆರಂಭ: ನಾಗರಿಕರ ಹಿತರಕ್ಷಣಾ ವೇದಿಕೆಯ ಹೋರಾಟಕ್ಕೆ ಜಯ
ಬಜಪೆ: ಬಜಪೆ ಏರ್ಪೋರ್ಟ್ನಿಂದ ಕೈಕಂಬದವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿತ್ತು. ರಸ್ತೆಯಲ್ಲಿನ ಹೊಂಡಗಳು ಮತ್ತು ಹದಗೆಟ್ಟ ಸ್ಥಿತಿಯಿಂದ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವಜನಿಕರಿಂದ ರಸ್ತೆ ದುರಸ್ತಿಗೆ ನಿರಂತರ ಒತ್ತಾಯ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯು ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಇಲಾಖೆಯ ಗಮನ ಸೆಳೆದಿತ್ತು. ವೇದಿಕೆಯ ಹೋರಾಟಕ್ಕೆ ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆ ಇದೀಗ ರಸ್ತೆ ಯ ದುರಸ್ಥಿ ಕಾಮಗಾರಿಯನ್ನು ಆರಂಭಿಸಿದೆ.
ರಸ್ತೆ ಕಾಮಗಾರಿಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವುದಾಗಿ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಸಾರ್ವಜನಿಕರ ಬಹುದಿನಗಳ ಸಮಸ್ಯೆಗೆ ಸ್ಪಂದಿಸಿ ರಸ್ತೆ ಕಾಮಗಾರಿ ಆರಂಭವಾಗಿರುವುದು ನಾಗರಿಕರ ಹಿತರಕ್ಷಣಾ ವೇದಿಕೆಯ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ. ಕಾಮಗಾರಿ ಆರಂಭಿಸಲು ಸ್ಪಂದಿಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ವೇದಿಕೆಯು ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸಿದ್ದಾರೆ.